ಚಿತ್ರದುರ್ಗ ಲೈವ್ ಕವರೇಜ್ (ಅ. 19): ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ದಲಿತರು, ರೈತರು, ಮಹಿಳೆಯರು ಹಾಗೂ ಯುವಕರ ವಿರೋಧಿಯಾಗಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅನುದಾನ ದುರುಪಯೋಗ ಖಂಡಿಸಿ ಹಾಗೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಚಳ್ಳಕೆರೆ ಮಂಡಲದ ನೇತೃತ್ವದಲ್ಲಿ ಈ ಹೋರಾಟ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಭಾಗ ಸಹ ಪ್ರಚಾರಿ ಮೇಘರಾಜ್, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಡಲಾಗಿದ್ದ ಶೇ. 18 ಹಾಗೂ 24ರಷ್ಟು ನಿಧಿಯ ಪೈಕಿ ಸುಮಾರು 35,000 ಕೋಟಿಗೂ ಹೆಚ್ಚಿನ ಹಣವನ್ನು ಅವರ ಅಭ್ಯುದಯಕ್ಕೆ ಬಳಸದೆ ನೌಕರರ ಸಂಬಳ ಸೇರಿದಂತೆ ಇತರೆ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿಗಳ ಬೃಹತ್ ಅಕ್ರಮ ನಡೆದಿದ್ದು, ದೆಹಲಿ ಹೈಕಮಾಂಡ್‌ಗೆ ಹಾಗೂ ತೆಲಂಗಾಣ, ಆಂಧ್ರಪ್ರದೇಶದ ಚುನಾವಣೆಗಳಿಗೆ ಕರ್ನಾಟಕವನ್ನು ‘ಎಟಿಎಂ’ ನಂತೆ ಬಳಸಿಕೊಳ್ಳಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು. ಕೆಪಿಎಸ್‌ಸಿ ಪರೀಕ್ಷೆ ಹಾಗೂ ನೇಮಕಾತಿಗಳಲ್ಲಿ ಭ್ರಷ್ಟಾಚಾರ ನಡೆದಿದ್ದು, ಯುವಕರ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಫಲಾನುಭವಿಗಳಿಗೆ ನೀಡದೆ ವಂಚಿಸಲಾಗಿದೆ ಎಂದು ಅವರು ದೂರಿದರು.
ಬರಗಾಲ ಘೋಷಣೆಗೆ ಆಗ್ರಹ
ಮಾಜಿ ಶಾಸಕ ತಿಪ್ಪೇಸ್ವಾಮಿ ಮಾತನಾಡಿ, “ರಾಜ್ಯದ ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳು ಹಾಗೂ ಚುನಾವಣೆಗಳಿಗೆ ಹಣ ಖರ್ಚು ಮಾಡುತ್ತಿದೆಯೇ ಹೊರತು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿಲ್ಲ. ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ತೀವ್ರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣವೇ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟು ಕೆರೆಗಳಿಗೆ ನೀರು ತುಂಬಿಸುವ ಕೆಲಸವನ್ನು ಸರ್ಕಾರ ಮಾಡಬೇಕು” ಎಂದು ಒತ್ತಾಯಿಸಿದರು.
ಕುಡಿಯುವ ನೀರಿಗೂ ಹಾಹಾಕಾರವಿದ್ದರೂ ಜಿಲ್ಲೆಯ ಸಚಿವರುಹಾಗೂ ಶಾಸಕರು ಮುಖ್ಯಮಂತ್ರಿಗಳ ಬಳಿ ತುಟಿ ಬಿಚ್ಚುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸಿಬಿಐ ತನಿಖೆಗೆ ಒತ್ತಾಯ: ಚಳ್ಳಕೆರೆ ಮಂಡಲ ಅಧ್ಯಕ್ಷ ಸುರೇಶ್ ಮಾತನಾಡಿ, “ಎಸ್‍ಸಿ/ಎಸ್‍ಟಿ ಸಮುದಾಯದ ಅಭಿವೃದ್ಧಿಗೆ, ಮನೆ, ಕೊಳವೆ ಬಾವಿ, ರಸ್ತೆ ಹಾಗೂ ಶಿಕ್ಷಣಕ್ಕೆ ಬಳಕೆಯಾಗಬೇಕಿದ್ದ ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಹಾಗೂ ಸಚಿವರು ತಮ್ಮ ಪಕ್ಷದ ಚುನಾವಣಾ ವೆಚ್ಚಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಅಲ್ಲಿಯವರೆಗೆ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ಹೊರಗಿಡಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಮಾರ್ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಮೋಹನ್ ಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಮದಾಸ್, ಚಳ್ಳಕೆರೆ ಮಂಡಲದ ಪ್ರಧಾನ ಕಾರ್ಯದರ್ಶಿ ಓಬಳೇಶ್, ಮುಖಂಡರಾದ ಲಿಂಗರಾಜು, ಬಂಡೆ ರಂಗಪ್ಪ, ಶಶೀಧರ್ ರೆಡ್ಡಿ, ಪರಶುರಾಮ್, ಮಂಡಿಸಿನಪ್ಪ, ಜಗದಂಬ, ಲಕ್ಷ್ಮೀ, ಶಾಂತಮ್ಮ, ದೇವರಹಳ್ಳಿ ಶೋಭರಾಜ್, ದೋರೆ ನಾಗರಾಜ್, ಶ್ರೀನಿವಾಸ್, ರಂಗಸ್ವಾಮಿ ಸೇರಿದಂತೆ ಚಿತ್ರದುರ್ಗ ಮತ್ತು ಚಳ್ಳಕೆರೆಯ ಪ್ರಮುಖ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Leave a comment