ಚಳ್ಳಕೆರೆ: ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟಿಟಿ ವಾಹನ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮಹಿಳೆಯರು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ತಾಲ್ಲೂಕಿನ ಹಿರೇಹಳ್ಳಿ ಸಮೀಪ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಹೊನ್ನೂರು ಗ್ರಾಮದ ನಾಗರಾಜ್ ಸೇರಿದಂತೆ ಸುಮಾರು 12 ಮಂದಿ ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಶನಿವಾರ ರಾತ್ರಿ 11ರ ಸುಮಾರಿಗೆ ಚಾಮರಾಜನಗರದಿಂದ ಮಂತ್ರಾಲಯಕ್ಕೆ ಹೊರಟಿದ್ದ ವಾಹನವು ಭಾನುವಾರ ಮುಂಜಾನೆ 3.15 ರ ಸುಮಾರಿಗೆ ಹಿರೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದಲ್ಲಿ ನವ್ಯ, ದಿವ್ಯ, ಪುಟ್ಟಮ್ಮ, ಶಮಿತಾ, ಲತಾ, ಯೋಶಿಕಾ, ಹೇಮಲತಾ, ಅಮೃತ, ಸೌಮ್ಯ, ಮೊದಲಾಂಬಿಕೆ, ಮೋಹನ್, ನಾಗರಾಜ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ
ಬಳಿಕ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಬಸವೇಶ್ವರ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಳಕು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.