ಭರಮಸಾಗರ: ಚಿತ್ರದುರ್ಗ ತಾಲೂಕಿನ ಬ್ಯಾಲಹಾಳ್ ಗ್ರಾಮದಲ್ಲಿ ಪುಂಡ ಯುವಕರ ಗುಂಪೊಂದು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ಇದನ್ನು ಪ್ರಶ್ನಿಸಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಹಲ್ಲೆಗೊಳಗಾದವರನ್ನು ಬ್ಯಾಲಹಾಳ್ ಗ್ರಾಮದ ಪ್ರದೀಪ್ (32) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ವಿವರ: ಗ್ರಾಮದಲ್ಲಿ ಕೆಲ ಯುವಕರು ನಿರಂತರವಾಗಿ ವಿದ್ಯಾರ್ಥಿನಿಯರ ಹಿಂದೆ ಬಿದ್ದು ಕಿರಿಕ್ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನು ಪ್ರದೀಪ್ ಪ್ರಶ್ನಿಸಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ನವೀನ್, ಕುಮಾರ, ಸಂಜಯ್ ಸೇರಿದಂತೆ ಹಲವರು ಮಾರಕಾಸ್ತ್ರಗಳೊಂದಿಗೆ ಬಂದು ಪ್ರದೀಪ್ ಮೇಲೆ ಹಲ್ಲೆ ನಡೆಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.
ಆರೋಪಿಗಳು ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿ ಇದೀಗ ವೈರಲ್ ಆಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.