ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ (GR ಹಳ್ಳಿ) ಸಮೀಪ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕೂನಬೇವು ಗ್ರಾಮದ ನಿವಾಸಿ ಸ್ವಾಮಿ (30) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಬುಧವಾರ ಬೆಳಿಗ್ಗೆ ಸ್ವಾಮಿ ಹಾಗೂ ಮತ್ತೊಬ್ಬ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ರಾಷ್ಟ್ರೀಯ ಹೆದ್ದಾರಿ 13ರ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರ್ಯಾಕ್ಟರ್ ಇವರ ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸ್ವಾಮಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬೈಕ್ನಲ್ಲಿದ್ದ ಮತ್ತೋರ್ವ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.