ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ಖಾಸಗಿ ಬಸ್ ಅಪಘಾತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ಗೋವಾದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್, ಮುಂಜಾನೆ ಪ್ರಯಾಣಿಕರೆಲ್ಲರೂ ಗಾಢ ನಿದ್ರೆಯಲ್ಲಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಚರಂಡಿಗೆ ಉರುಳಿಬಿದ್ದಿದೆ. ಅಪಘಾತ ಸಂಭವಿಸಿದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಪುಡಿಯಾಗಿವೆ. ಬಸ್ ಉರುಳಿಬಿದ್ದ ರಭಸದ ತೀವ್ರತೆಗೆ ಮೃತದೇಹಗಳು ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟಿದ್ದವು.
ಕ್ರೇನ್ ಮೂಲಕ ಬಸ್ ತೆರವು: ದುರ್ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾಲುವೆಯೊಳಗೆ ಪಲ್ಟಿಯಾಗಿದ್ದ ಬಸ್ಸನ್ನು ಕ್ರೇನ್ ತರಿಸಿ ಮೇಲಕ್ಕೆ ಎತ್ತಲಾಯಿತು. ಮೃತಪಟ್ಟವರ ನಿಖರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
ಚಾಲಕನ ನಿದ್ದೆ ಮಂಪರೇ ಕಾರಣ: ಬೆಳಗಿನ ಜಾವ ಚಾಲಕನಿಗೆ ಆವರಿಸಿದ ನಿದ್ದೆ ಮಂಪರೇ ಈ ಭೀಕರ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ವಾಹನ ಅತಿವೇಗದಲ್ಲಿದ್ದ ಸಂದರ್ಭದಲ್ಲಿ ಚಾಲಕ ಏಕಾಏಕಿ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಇಳಿಸಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a comment