ಚಿತ್ರದುರ್ಗ: ನಗರದ ಹೊರವಲಯದ ಕಣಿವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್‌ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 4ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಎಲ್ಲಾ ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.