ಹಿರಿಯೂರು: ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆ.12ರಂದು ನಡೆದ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಹಾಗೂ ನಿಗದಿತ ನಿಯಮ ಉಲ್ಲಂಘಿಸಿ ಡಿಜೆ ಬಳಸಿದ ಒಟ್ಟು 16 ಮಂದಿ ವಿರುದ್ಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಕೃಷ್ಣಜಯಂತಿ ಮೆರವಣಿಗೆಗೆ ಎರಡು ಸ್ಟಿಕರ್‌ಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು. ಡಿಜೆ ಬಳಕೆಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಕೆಲವರು ಚಿತ್ರದುರ್ಗ–ಬೆಂಗಳೂರು ಮಾರ್ಗದ ಎನ್‌ಎಚ್–48ರಲ್ಲಿ ವಾಹನಗಳನ್ನು ಏಕಾಏಕಿ ತಡೆದು, ರಸ್ತೆಗೆ ಅಡ್ಡಲಾಗಿ ಕುಳಿತು ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ, ಮೆರವಣಿಗೆಗೆ ವಿಧಿಸಲಾಗಿದ್ದ ನಿಬಂಧನೆಗಳನ್ನು ಉಲ್ಲಂಘಿಸಿ ನಿಗದಿತ ಡೆಸಿಬಲ್ ಮಿತಿಯನ್ನು ಮೀರಿ ಧ್ವನಿವರ್ಧಕಗಳನ್ನು ಬಳಸಿರುವುದು ಕಂಡುಬಂದಿದೆ.
ಈ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 229/2026ರಲ್ಲಿ 11 ಮಂದಿ ಹಾಗೂ 230/2026ರಲ್ಲಿ ಐದು ಮಂದಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದವರ ಪತ್ತೆ ಕಾರ್ಯ ಮುಂದುವರಿದಿದೆ. ನಿಯಮ ಮೀರಿ ಬಳಸಿದ್ದ ಡಿಜೆ ಉಪಕರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಕೆಗೆ ಅನುಮತಿ ಇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಆಯೋಜಕರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಸೂಚನೆಗಳಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಸಾರ್ವಜನಿಕರ ಹಿತ ಮತ್ತು ಸುರಕ್ಷತೆ ದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಹಾಗೂ ಪೇಪರ್ ಬ್ಲಾಸ್ಟಿಂಗ್ ಬಳಕೆಯನ್ನು ನಿಷೇಧಿಸಲಾಗಿದೆ. ಮೆರವಣಿಗೆ ಸಂದರ್ಭದಲ್ಲಿ ರಸ್ತೆ ತಡೆದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟು ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಗಣಪತಿ ಪ್ರತಿಷ್ಠಾಪನಾ ಸಮಿತಿಗಳು ಸ್ಥಳೀಯ ಸಂಸ್ಥೆಗಳು, ಬೆಸ್ಕಾಂ, ಅಗ್ನಿಶಾಮಕ ದಳ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಮತ್ತು ಪ್ರಾಧಿಕಾರಗಳಿಂದ ಅಗತ್ಯ ಎನ್‌ಒಸಿ ಪಡೆಯಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು.
ಸುಳ್ಳು ಸುದ್ದಿ ಅಥವಾ ಅನಧಿಕೃತ ಮಾಹಿತಿಯನ್ನು ಹಂಚಿಕೊಂಡು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.